ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಗ್ರಾಮಸ್ಥ ಸಿದ್ದಿಕ್ ಮನವಿ: ಶಾಲಾ ಮಕ್ಕಳು, ಸಾರ್ವಜನಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಒತ್ತಾಯ

ಬಣಕಲ್ :ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಆತಂಕದಿಂದ ಸಂಚರಿಸುವಂತಾಗಿದೆ. ದಿನ ಬೆಳಗಾಗುತ್ತಿದ್ದಂತೆ ರಸ್ತೆಯಲ್ಲಿ ಹಿಂಡು ಹಿಂಡಾಗಿ ಬೀದಿ ನಾಯಿಗಳು ಮಲಗಿರುವುದು ಕಂಡುಬರುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ನಾಯಿ ದಾಳಿಯ ಭೀತಿ ಎದುರಿಸುತ್ತಿರುವ ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸುವಂತೆ ಒತ್ತಾಯಿಸಿದ್ದಾರೆ.


ಈ ಕುರಿತು ಮಾತನಾಡಿದ ಸಿದ್ದಿಕ್ ಅವರು, ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ನಾಯಿಗಳನ್ನು ಕೊಲ್ಲುವಂತಿಲ್ಲ ಎಂಬ ಸುಪ್ರೀಂ ಕೋರ್ಟ್‌ನ ಆದೇಶವಿರುವ ಹಿನ್ನೆಲೆಯಲ್ಲಿ, ನಿಯಮಾನುಸಾರ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ನಿರೋಧಕ ಲಸಿಕೆ ನೀಡುವ ಮೂಲಕ ಅವುಗಳ ಸಂಖ್ಯೆಯನ್ನು ನಿಯಂತ್ರಿಸಬೇಕು. ಅಗತ್ಯವಿದ್ದಲ್ಲಿ ಕಾನೂನುಬದ್ಧವಾಗಿ ಸುರಕ್ಷಿತ ಸ್ಥಳಾಂತರದ ಬಗ್ಗೆಯೂ ಕ್ರಮ ಕೈಗೊಳ್ಳಬೇಕು. ಅರಣ್ಯ ಪ್ರದೇಶಕ್ಕೆ ನಾಯಿಗಳನ್ನು ಬಿಡುವ ಬದಲು ಸರ್ಕಾರದ ನಿಯಮಗಳಿಗೆ ಅನುಗುಣವಾಗಿ ಪರಿಹಾರ ಕಂಡುಕೊಳ್ಳಬೇಕು. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಮುನ್ನೆಚ್ಚರಿಕೆ ವಹಿಸಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.