ರಾಜ್ಯ ಮಟ್ಟದ ಅಫೆಕ್ಸ್ ಬ್ಯಾಂಕ್ ಪ್ರಶಸ್ತಿಗೆ ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಯ್ಕೆ!

ಚಿಕ್ಕಮಗಳೂರು: 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನವೆಂಬರ್ 14ರಿಂದ 20ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

“ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ ಹಾಗೂ ವೃತ್ತಿಪರ ಸೇವೆ” ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾದ ಸಹಕಾರ ಸಪ್ತಾಹದ ಅಂಗವಾಗಿ, ಜಿಲ್ಲೆಯಲ್ಲಿ ಉತ್ತಮ ಹಾಗೂ ರಚನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳನ್ನು ಗುರುತಿಸಿ ಗೌರವಿಸಲು ತೀರ್ಮಾನಿಸಲಾಗಿತ್ತು.

ಅದರಂತೆ, ಮೂಡಿಗೆರೆ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಉತ್ತಮ ಸಹಕಾರ ಸಂಘವೆಂದು ಪರಿಗಣಿಸಿ ಆಯ್ಕೆ ಮಾಡಲಾಯಿತು.

ನವೆಂಬರ್ 20ರಂದು ಮಾಕೋನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆದ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಈ ಪ್ರಶಸ್ತಿಯು ಸಂಘದ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದ್ದು, ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದ ಸಾಧನೆಗೆ ಸಂದ ಗೌರವವಾಗಿದೆ.


ವರದಿ ✍️ಸೂರಿ ಬಣಕಲ್