ಬಣಕಲ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಸಮಾಧಾನ ಸ್ಫೋಟ: ಏಕಪಕ್ಷೀಯ ನಿರ್ಧಾರಗಳಿಗೆ ಕಾರ್ಯಕರ್ತರ ಆಕ್ಷೇಪ

ಬಣಕಲ್: ಬಣಕಲ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಹಾಗೂ ಸಂಘಟನಾ ವಿಚಾರಗಳ ಕುರಿತು ಕಾರ್ಯಕರ್ತರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದರು.

ಪಕ್ಷದಲ್ಲಿ ಏಕಪಕ್ಷೀಯ ನಡವಳಿಕೆ ನಡೆಯುತ್ತಿದೆ ಎಂಬ ಭಾವನೆ ಕಾರ್ಯಕರ್ತರಲ್ಲಿ ಮೂಡಿದ್ದು, ಪಕ್ಷದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ಕಾರ್ಯಕರ್ತರ ಅಭಿಪ್ರಾಯಗಳಿಗೆ ಸೂಕ್ತ ಮನ್ನಣೆ ನೀಡುತ್ತಿಲ್ಲ ಎಂದು ಸಭೆಯಲ್ಲಿ ಬೇಸರ ವ್ಯಕ್ತವಾಯಿತು.

ವಿಶೇಷವಾಗಿ ಬೂತ್ ಅಧ್ಯಕ್ಷರ ನೇಮಕಾತಿ ವಿಚಾರವಾಗಿ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯಗಳನ್ನು ಪಡೆಯದೆ ಬೂತ್ ಅಧ್ಯಕ್ಷರ ನೇಮಕಾತಿ ನಿರ್ಧಾರ ಕೈಗೊಂಡಿರುವುದು ಸರಿಯಾದ ಕ್ರಮವಲ್ಲ ಎಂದು ಮೂಡಿಗೆರೆ ಬ್ಲಾಕ್ ಅಲ್ಪಸಂಖ್ಯಾತರ ಕಾರ್ಯಾಧ್ಯಕ್ಷ ಇರ್ಫಾನ್ ಆಕ್ಷೇಪ ಹೊರಹಾಕಿದರು.
ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಿರಿಯ ಮುಖಂಡರು ಹಾಗೂ ಸಾಮಾನ್ಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕು. ಪ್ರತಿಯೊಬ್ಬ ಕಾರ್ಯಕರ್ತನಿಗೂ ಗೌರವ ನೀಡುವುದರ ಜೊತೆಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಕಾರ್ಯಕರ್ತರ ಅಭಿಪ್ರಾಯಗಳಿಗೆ ಮನ್ನಣೆ ನೀಡದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ಮುಂದುವರಿಸಿದರೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಸಂಘಟನೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಹಾಗೂ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂಬ ಆತಂಕವನ್ನು ಕಾರ್ಯಕರ್ತರು ವ್ಯಕ್ತಪಡಿಸಿದರು.

ಪಕ್ಷದ ಸಂಘಟನೆಯಲ್ಲಿ ಒಗ್ಗಟ್ಟು, ಪರಸ್ಪರ ವಿಶ್ವಾಸ ಹಾಗೂ ಕಾರ್ಯಕರ್ತರ ಸಹಭಾಗಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಎಲ್ಲರ ಅಭಿಪ್ರಾಯಗಳನ್ನು ಆಲಿಸಿ ಒಮ್ಮತದ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಪಕ್ಷದ ಸಂಘಟನೆಯನ್ನು ಮುನ್ನಡೆಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಸಭೆಯಲ್ಲಿ ಉಪಸ್ಥಿತರಿದ್ದವರು: ಮೂಡಿಗೆರೆ ಬ್ಲಾಕ್ ಅಲ್ಪಸಂಖ್ಯಾತರ ಕಾರ್ಯಾಧ್ಯಕ್ಷ ಇರ್ಫಾನ್, ಬಣಕಲ್ ಹೋಬಳಿ ಪ್ರಧಾನ ಕಾರ್ಯದರ್ಶಿ ಉಮರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರುದ್ರಯ್ಯ, ಸಬ್ಳಿ ಮಂಜಯ್ಯ, ಗಿರೀಶ್, ಬಣಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅತಿಕ ಬಾನು, ಬೂತ್ ಅಧ್ಯಕ್ಷರಾದ ಅಶ್ರಫ್, ರಿಯಾಜ್, ಅದಂ, ಅಯೂಬ್, ಹೆಬ್ರಿಗೆ ಮಂಜುನಾಥ್, ಸಬ್ಳಿ ಬೂತ್ ಅಧ್ಯಕ್ಷ ಚಂದ್ರಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಸುಜಾತ, ಹಾರುನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ವರದಿ ✍️ಸೂರಿ ಬಣಕಲ್